NEET UG 2024: ನೀಟ್ ಮರು ಪರೀಕ್ಷೆ ಇಲ್ಲ, ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು
NEET UG 2024 : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸಾರಾ ಸಗಟಾಗಿ ತಿರಸ್ಕರಿಸಿದೆ. ನಿರೀಕ್ಷೆಯಂತೆಯೇ ನೀಟ್ ಮರು ಪರೀಕ್ಷೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬಯಲಾಗಿರುವ ಹಿನ್ನೆಲೆ ಮೇ 5 ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ರದ್ದು ಮಾಡಿ, ಮರು ಪರೀಕ್ಷೆಗೆ ಆದೇಶ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಹೊಸದಾಗಿ ಮತ್ತೆ ಪರೀಕ್ಷೆ ನಡೆಸುವುದು ಈಗ ಇರುವ 20 ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಕ್ರಮ ದೇಶವ್ಯಾಪಿ ನಡೆದಿಲ್ಲ. ಮರು ಪರೀಕ್ಷೆಗೆ ಆದೇಶಿಸಲು ಪೂರಕವಾದ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಕೋರ್ಟು ತನ್ನ ತೀರ್ಪಿನಲ್ಲಿ ಹೇಳಿದೆ.
"ಇಡೀ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೃಢವಾದರೆ ಮಾತ್ರ ಮರು ಪರೀಕ್ಷೆ ನಡೆಸಬಹುದು” ಎಂದು ಸಿಜೆಐ (Chief Justice of India) ಡಿ.ವೈ.ಚಂದ್ರಚೂಡ್ ( DY chandrachud) ತಿಳಿಸಿದ್ದಾರೆ. “ವಿವಾದ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ನಮಗೆ ಹೇಳಿದ್ದನ್ನೆಲ್ಲ ಬಹಿರಂಗಪಡಿಸಿದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕೋರ್ಟ್ ಹೇಳಿದೆ.
ನೀಟ್ ಪರೀಕ್ಷೆಗಳ ಫಲಿತಾಂಶಗಳನ್ನು, ಕಳೆದ ಮೂರು ದಿನಗಳ ಹಿಂದೆಯಷ್ಟೇ ನಗರ ಮತ್ತು ಕೇಂದ್ರವಾರು ಪ್ರಕಟವಾಗಿತ್ತು. ನೀಟ್-ಯುಜಿ 2024 (NEET UG 2024) ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(NTA)ಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗಪಡಿಸದಂತೆ ಸೂಚನೆ ಕೂಡಾ ನೀಡಿತ್ತು.
ನೀಟ್ UG 2024 ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಅಲ್ಲದೆ ಹರಿಯಾಣದ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ ನಡೆದ ಈ ನೀಟ್ ಪರೀಕ್ಷೆಯು 05 ಮೇ 2024 ರಂದು ಆಗಿತ್ತು. ನೀಟ್ ಯುಜಿ ಪರೀಕ್ಷೆಯನ್ನು ಪರೀಕ್ಷೆಯನ್ನು 13 ಭಾಷೆಗಳಲ್ಲಿ - ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ ಒಟ್ಟು 24,06,079 ಅಭ್ಯರ್ಥಿಗಲು ಕೂತಿದ್ದು ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು.